ತುಮಕೂರು : ರಾಜ್ಯ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಹಾಗೂ ಮದ್ಯಾಹ್ನ.2.30 ರಿಂದ ಸಂಜೆ 5 ಗಂಟೆಯವರೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಕುಂದು-ಕೊರತೆ ಅಹವಾಲುಗಳನ್ನು ಸ್ವೀಕರಿಸಲಿದ್ದು, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಎ.ವಿ. ಲಕ್ಮೀನಾರಾಯಣ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಹಾಗೂ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸಭೆಯನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ವಿವಿಧ ಅಧಿಕಾರಿಗಳು ಭಾಗವಹಿಸುವರು.
ನಂತರ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸಂಜೆ 5.30 ರಿಂದ 6.30 ಗಂಟೆಯವರೆಗೆ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಪಾತ್ರ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.