ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ,ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ತಿಳಿಸಿದರು.
ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ಧ್ಯೇಯದಂತೆ ಎಲ್ಲರಿಗೂ ಸಮಾನ ನ್ಯಾಯವನ್ನು ಒದಗಿಸುವುದೇ ಲೋಕಾಯುಕ್ತದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರ ಬಳಿಗೆ ಬಂದು ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ರಾಜ್ಯದ 17 ಜಿಲ್ಲೆಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ನಡೆಸಿ ಪರಿಹಾರ ನೀಡುವ ಪ್ರಯತ್ನ ಮಾಡಲಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಗೂ ಸಹ ಉತ್ತಮ ಜೀವನ ರೂಪಿಸಿಕೊಳ್ಳಲು ಅವಕಾಶ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮನುಷ್ಯ ಹುಟ್ಟಿದಾಗಿನಿಂದ ಸಾಯುವವರೆಗೂ ಗೌರವಯುತವಾಗಿ ಬದುಕಲು ಅಗತ್ಯವಿರುವ ಸಂವಿಧಾನಾತ್ಮಕ ಮೂಲಭೂತ ಹಕ್ಕುಗಳನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಹಕ್ಕುಗಳಿಗೆ ಚ್ಯುತಿ ಉಂಟಾದಾಗ ತನ್ನನ್ನು ತಾನು ರಕ್ಷಿಸಿಕೊಳ್ಳಲು ಕಾನೂನಿನ ಅರಿವು ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಿರಬೇಕು ಎಂದು ತಿಳಿಸಿದರು.
ಹಣ-ಅಧಿಕಾರದಿಂದ ಮಾತ್ರ ಸರ್ಕಾರಿ ಕೆಲಸ ನಡೆಯುತ್ತವೆ ಎಂಬ ನಂಬಿಕೆಯನ್ನು ದೂರ ಮಾಡಬೇಕು
ಸರ್ಕಾರಿ ಅಧಿಕಾರಿಗಳು ಸತ್ಯ, ನಿಷ್ಠೆಯಿಂದ ಕೆಲಸ ಮಾಡುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಬೇಕು. ಹಣ ಮತ್ತು ಅಧಿಕಾರವಿದ್ದವರಿಗೆ ಮಾತ್ರ ಸರ್ಕಾರಿ ಸೇವೆ ದೊರೆಯುತ್ತವೆ ಎಂದು ಶೇ.80ರಷ್ಟು ಜನರಲ್ಲಿ ನಂಬಿಕೆ ಇದೆ. ಇಂಥಹ ನಂಬಿಕೆಯನ್ನು ತೊಲಗಿಸಲು ಸರ್ಕಾರಿ ಅಧಿಕಾರಿಗಳು ಅನಗತ್ಯ ವಿಳಂಬ ಮಾಡದೆ ಸಾರ್ವಜನಿಕರಿಗೆ ನ್ಯಾಯಯುತವಾಗಿ ನಿಗಧಿತ ಕಾಲಾವಧಿಯಲ್ಲಿ ಸೇವೆ ಒದಗಿಸಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಜಾರಿಗೆ ತರುವ ಆದೇಶಗಳನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನ ಬಹುದೊಡ್ಡ ಜವಾಬ್ದಾರಿ ಕಾರ್ಯಾಂಗದ ಮೇಲಿದ್ದು, ಸರ್ಕಾರದ ಪ್ರಮುಖ ಆಧಾರ ಸ್ತಂಭವಾದ ಕಾರ್ಯಾಂಗವು ವ್ಯವಸ್ಥಿತವಾಗಿ ತನ್ನ ಕಾರ್ಯ ನಿರ್ವಹಿಸಿದಾಗ ಮಾತ್ರ ಗಾಂಧೀಜಿಯವರ ರಾಮ ರಾಜ್ಯದ ಕನಸನ್ನು ನನಸಾಗಿಸಲು ಸಾಧ್ಯವೆಂದು ತಿಳಿಸಿದರು