ರಾಜ್ಯದ ಸಮಗ್ರ ನೀರಾವರಿಗೆ ಒತ್ತು ನೀಡಲಾಗುವುದು; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ತುಮಕೂರು : ಹೆಚ್ಚು ಅನುದಾನ ಬಿಡುಗಡೆ ಮಾಡುವ ಮೂಲಕ ರಾಜ್ಯದ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತು ನೀಡಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ತಿಪಟೂರು ಪಟ್ಟಣದಲ್ಲಿಂದು ಮಿನಿ ವಿಧಾನಸೌಧ, ನಗರ ಸಭೆ ಕಚೇರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಕಟ್ಟಡಗಳ ಉದ್ಘಾಟನೆ ನಂತರ ಸರ್ಕಾರಿ ಬಾಲಕರ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಷ್ಟೇ ಕಷ್ಟವಾದರೂ ರಾಜ್ಯದ ಸಮಗ್ರ ನೀರಾವರಿ ಯೋಜನೆಗೆ ಹೆಚ್ಚು ಅನುದಾನ ಬಿಡುಗಡೆ ಮಾಡಿ, ಕೇಂದ್ರ ಸರಕಾರದ ಸಹಕಾರ ಪಡೆದು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಕೆರೆ-ಕಟ್ಟೆ ತುಂಬಿಸಿ ಅಂತರ್ಜಲ ಮಟ್ಟದ ಕುಸಿತ ತಪ್ಪಿಸಲಾಗುವುದು ಎಂದರಲ್ಲದೆ ಕಳೆದ ಹತ್ತಾರು ವರ್ಷಗಳಿಗಿಂತಲೂ ರೈತರು ಈ ಬಾರಿ ದಾಖಲೆ ಪ್ರಮಾಣದ ಬೆಳೆ ಬೆಳೆದಿದ್ದು, ಹಗಲು-ರಾತ್ರಿ ದುಡಿಯುವ ಅನ್ನದಾತರಿಗೆ ನಾಡಿನ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ತಿಪಟೂರಿನಲ್ಲಿ ಆಗಬಹುದಾದ ಕೆಲಸಗಳನ್ನು ಹಂತ ಹಂತವಾಗಿ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ರಾಜ್ಯದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಸರ್ಕಾರ ಕಾರ್ಯನಿರ್ವಹಿಸುತ್ತಿದೆ.
ಪ್ರಧಾನ ಮಂತ್ರಿ ಮೋದಿ ಅವರ ಅಪೇಕ್ಷೆಯಂತೆ 2023 ರೊಳಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಿದ್ದು, ಕಷ್ಟದ ಪರಿಸ್ಥಿತಿಯಲ್ಲಿ ರೈತರಿಗೆ ಕೇಂದ್ರದ ಅನುದಾನದೊಂದಿಗೆ ರಾಜ್ಯದ ಅನುದಾನ ನೀಡಲಾಗುತ್ತಿದೆ ಎಂದರು. ಎತ್ತಿನಹೊಳೆ ಮೊದಲ ಹಂತದ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಭದ್ರಾ ಮೇಲ್ದಂಡೆ ಯೋಜನೆ ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಬೆಂಗಳೂರಿನ ವೃಷಭಾವತಿ ನದಿಯ ಸಂಸ್ಕರಿಸಿದ ನೀರನ್ನು ತುಮಕೂರು ಸೇರಿದಂತೆ ನಾಲ್ಕು ಜಿಲ್ಲೆಗಳ 234 ಕೆರೆಗಳಿಗೆ ನೀರು ತುಂಬಿಸಲು 500 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಗ್ರಾಮೀಣರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಮುಂದಿನ ದಿನದಲ್ಲಿ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು , ಜಿಲ್ಲಾ ಉಸ್ತುವಾರಿ ಸಚಿವರು ಸಹ ತಿಂಗಳಲ್ಲಿ ಒಂದು ದಿನ ಜಿಲ್ಲೆಯಲ್ಲಿ ವಾಸ್ತವ್ಯ ಮಾಡಲು ಸೂಚಿಸಿರುವುದಾಗಿ ತಿಳಿಸಿದ ಅವರು ಏಪ್ರಿಲ್ ಬಜೆಟ್ ಮುಗಿದ ಬಳಿಕ ಪ್ರತಿ ತಿಂಗಳು ಒಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಿಲ್ಲೆಯ ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.


ಕರ್ನಾಟಕ ಸಮಗ್ರ ಅಭಿವೃದ್ಧಿ ಹಿನ್ನೆಲೆಯಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಉತ್ತಮ ಬಜೆಟ್ ಮಂಡಿಸಲಾಗಿದೆ. ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಉತ್ತಮ ಬೆಲೆ ಸಿಗಬೇಕು. ಮಹಿಳೆಯರ ಸಬಲೀಕರಣ ಆಗಬೇಕು. ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಹಣಕಾಸಿನ ನೆರವು ದೊರಕಿ ಮಹಿಳೆಯರು ಸ್ವಾವಲಂಭಿಗಳಾಗಿ ಅವರ ಕುಟುಂಬಗಳನ್ನು ನಡೆಸುವ ಶಕ್ತಿ ಬರಬೇಕು ಎಂಬ ದೃಷ್ಟಿಯಲ್ಲಿ ಈ ಬಜೆಟ್ ನಲ್ಲಿ ಮಹಿಳೆಯರಿಗೆ ಒತ್ತು ನೀಡಲಾಗಿದೆ. ಇದನ್ನು ಸದುಪಯೋಗ ಮಾಡಿಕೊಳ್ಳುವಂತೆ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುವುದು ಜಿಲ್ಲಾಡಳಿತದ ಕರ್ತವ್ಯ. ಹಾಗಾಗಿ ಜಿಲ್ಲಾಡಳಿತ ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.
ಹತ್ತು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಿನಿ ವಿಧಾನ ಸೌಧದಲ್ಲಿ ಒಂದೇ ಸೂರಿನಡಿ ಸುಲಭವಾಗಿ ಸರಕಾರದ ಸೌಲಭ್ಯಗಳು ದೊರಕುತ್ತವೆ. ಇನ್ನು ನಗರ ಕಾರ್ಯಾಲಯದಿಂದ ನಗರ ವಾಸಿಗಳಿಗೆ ಸುಲಭವಾಗಿ ಸೌಲಭ್ಯಗಳು ದೊರಕಲಿದ್ದು, ಇಂದು ಉದ್ಘಾಟನೆಗೊಂಡಿರುವ ವಿವಿಧ ಕಟ್ಟಡಗಳಿಂದ ತಾಲೂಕಿನ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದರು.

ಭ್ರಷ್ಟಾಚಾರ ತಡೆಗೆ ಜನ ಜಾಗೃತರಾಗಬೇಕು. ಅಧಿಕಾರಿಗಳು ಕಡತಗಳ ವಿಲೇವಾರಿಯಲ್ಲಿ ವಿಳಂಬ ಮಾಡಬಾರದು. ಆಗ ಭ್ರಷ್ಟಾಚಾರ ನಿಲ್ಲುತ್ತದೆ. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಪ್ರಮುಖ ವಾಣಿಜ್ಯ ಕೇಂದ್ರವಾದ ತಿಪಟೂರು ಕೊಬ್ಬರಿ ವಹಿವಾಟು ಹಾಗೂ ಶೈಕ್ಷಣಿಕ ಸಾಧನೆಗೂ ಪ್ರಸಿದ್ಧವಾಗಿದೆ. ಏಷ್ಯಾದಲ್ಲೇ ಅತಿ ದೊಡ್ಡ ಕೊಬ್ಬರಿ ಮಾರುಕಟ್ಟೆಯಾಗಿರುವ ತಿಪಟೂರಿನಿಂದಲೇ ರಾಜ್ಯದಲ್ಲಿನ ಕೊಬ್ಬರಿ ಬೆಲೆ ನಿಯಂತ್ರಣಗೊಳ್ಳುತ್ತದೆ ಎಂದು ತಿಳಿಸಿದರು.

ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು,
ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೋವಿಡ್ ತಡೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಗಳಿಗೆ ಷರತ್ತು ಹಾಕಲಾಗಿದೆ. ಆದರೆ ಸಾರ್ವಜನಿಕವಾಗಿ ನಡೆಯುವ ಸಭೆಗಳಿಗೆ ಯಾವುದೇ ನಿಬಂಧನೆ ಹಾಕಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಎಚ್ಚರಿಕೆಯಿಂದ ಇರಬೇಕು ಎಂದರು.

ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ, ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಮಾಜಿ ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿ.ಪಂ.ಸಿಇಓ ಜಿ.ಎಂ.ಗಂಗಾಧರಸ್ವಾಮಿ, ಕೇಂದ್ರವಲಯ ಐಜಿ ಚಂದ್ರಶೇಖರ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ, ತಹಶೀಲ್ದಾರ್ ಚಂದ್ರಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸೇರಿದಂತೆ ಮತ್ತಿತರರು ಹಾಜರಿದ್ದರು.

error: Content is protected !!