ಕನ್ನಡಿಗರು ಪ್ರತಿದಿನ ಕನ್ನಡದಲ್ಲೆ ಮಾತನಾಡಿ:ಸಿ ಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರುನಾಡಿನಲ್ಲೆಡೆ ಇಂದು 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು. ಬಳಿಕ ಮಾತನಾಡಿ, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು. ಕನ್ನಡ ನಮ್ಮೆಲ್ಲರನ್ನೂ ಒಗ್ಗೂಡಿಸಿದೆ. ಕನ್ನಡ ನಮ್ಮ ದೇವರು. ಕನ್ನಡವೆಂಬ ತಾಯಿ ದೇವರನ್ನು ಸಂರಕ್ಷಿಸಬೇಕು ಎಂದು ಹೇಳಿದರು.

ಕನ್ನಡವನ್ನು ಬೃಹತ್ ಹೆಮ್ಮರವಾಗಿ ಬೆಳಸಬೇಕೆಂದು ಕರೆ ನೀಡಿದ ಬೊಮ್ಮಾಯಿ, ಭಾಷೆ ಸದೃಢವಾಗಿದ್ದರೆ ಆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಭಾರತದಲ್ಲಿ ಅತ್ಯಂತ ಪುರಾತನವಾದ ಭಾಷೆ ಕನ್ನಡ. ಕನ್ನಡ ಭಾಷೆಗೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನ ನೀಡಬೇಕು. ಕನ್ನಡವನ್ನು ರಾಜ್ಯದ ಗಡಿಯೊಳಗೆ ಸೀಮಿತವಾಗಿ ನೋಡುತ್ತಿಲ್ಲ. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಮಾಡಬೇಕು. ಕಿತ್ತೂರು ಕರ್ನಾಟಕ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಗಡಿ ವಿವಾದಗಳು ಇದ್ದಾಗಲೂ ಮುಂಬೈ ಕರ್ನಾಟಕ ಅನ್ನಬಾರದು ಅಂತ ತಿಳಿಸಿದರು.

ರಾಜ್ಯದ ಯಾವುದೇ ಪ್ರದೇಶ ಹಿಂದುಳಿಯಲು ಬಿಡುವುದಿಲ್ಲ. 3 ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ ನೀಡುತ್ತದೆ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಯೋಜನೆ ರೂಪಿಸುತ್ತೇವೆ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಬೇಕು. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಬಾರದವರಿಗೆ ಕನ್ನಡ ಭಾಷೆಯನ್ನು ಕಲಿಸಬೇಕು. ಕನ್ನಡಿಗರಿಗೆ ಕೆಲಸ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ, ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯಪಟ್ಟರು.

ಕನ್ನಡ ರಾಜ್ಯೋತ್ಸವದಿಂದ ಕನ್ನಡಿಗರ ಜನೋತ್ಸವ ಆಗಬೇಕು ಎಂದು ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ ಸಿಎಂ, ಎಲ್ಲರೂ ಒಟ್ಟಾಗಿ ಕರ್ನಾಟಕ, ಕನ್ನಡಿಗರ ಬದುಕು ಕಟ್ಟೋಣ. ಗುರಿ ಮುಟ್ಟುವವರೆಗೆ ಎಲ್ಲರೂ ಒಟ್ಟಾಗಿ ಸಾಗೋಣ.ಕರ್ನಾಟಕ, ಕನ್ನಡ, ಕನ್ನಡಿಗರಿಗಾಗಿ ಒಟ್ಟಾಗಿ ದುಡಿಯೋಣ ಎಂದರು.

error: Content is protected !!