ತುಮಕೂರು: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜು ಆವರಣದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದು ಆಸ್ಪತ್ರೆ ಸೇರುವ ಮೊದಲೆ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರಿನ ವಿನಾಯಕ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿ 17 ವರ್ಷದ ಶಮಂತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಗುರುವಾರ ಬೆಳಗ್ಗೆ ಎಲ್ಲಾ ಮಕ್ಕಳಂತೆ ಕಾಲೇಜಿಗೆ ಬಂದ ಶಮಂತ್ ಸಹಪಾಠಿ ಗಳೊಂದಿಗೆ ಮಾತನಾಡುತ್ತ ನಿಂತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನ ಸಹಪಾಠಿಗಳು ಕಾಲೇಜು ಸಿಬ್ಬಂದಿ ಸೇರಿ ಆ್ಯಂಬ್ಯಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದ್ದಾರೆ. ಆದರೆ ಮಾರ್ಗ ಮದ್ಯೆ ಶಮಂತ್ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಪುಟ್ಟ ಮಕ್ಕಳು, ಯುವಕರಲ್ಲಿ ಹೆಚ್ಚಾಗಿ ಹೃದಯಾಘಾತ ಉಂಟಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಬಾಳಿ ಬದುಕ ಬೇಕಾದ ಮಕ್ಕಳು ಹೀಗೆ ಎಳೆಯ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಕೂಡಲೇ ಸರ್ಕಾರ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕಾಗಿದೆ.