ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಮಂಗಳವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಸಚಿವರು, ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ. ಹಾಸನ ಜಿಲ್ಲೆಯ ಹಲ್ಮಿಡಿ ಗ್ರಾಮದಲ್ಲಿ ಈ ಶಾಸನ ದೊರೆತಿದ್ದು, ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಈ ಶಾಸನದ ಪ್ರತಿಕೃತಿಯನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ ಎಂದು ತಿಳಿಸಿದರು.
ಜಿಮ್ನಾಸ್ಟಿಕ್ ವಿಭಾಗದಲ್ಲಿ ರಾಷ್ಟç ಪ್ರಶಸ್ತಿ ಪಡೆದ ಜಿಲ್ಲಾ ಕ್ರೀಡಾ ಸಮಿತಿ ಕ್ರೀಡಾಪಟುಗಳನ್ನು ಅಭಿನಂದಿಸಿದ ಸಚಿವರು ವಾಲಿಬಾಲ್, ಫುಟ್ ಬಾಲ್, ಕಬಡ್ಡಿ, ಖೋ ಖೋ ಕ್ರೀಡೆಗಳಲ್ಲಿ ಜಿಲ್ಲೆಯು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಜಿಲ್ಲೆಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಜಿಲ್ಲೆಯ ಕ್ರೀಡಾಪಟುಗಳ ಅನುಕೂಲಕ್ಕಾಗಿ 58 ಕೋಟಿ ರೂ. ವೆಚ್ಚದಲ್ಲಿ ಉತ್ತಮ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ನಗರ ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಕನ್ನಡದ ಮೊದಲ ಹಲ್ಮಿಡಿ ಶಾಸನವನ್ನು 1936ರಲ್ಲಿ ಡಾ: ಎಂ.ಎಚ್. ಕೃಷ್ಣ ಅವರು ಸಂಶೋಧಿಸಿದ್ದಾರೆ. ಹಲ್ಮಿಡಿ ಶಾಸನವು ಕನ್ನಡ ಭಾಷೆಯ ಇತಿಹಾಸ, ಪರಂಪರೆಯನ್ನು ತಿಳಿಸುತ್ತದೆ. ಕನ್ನಡದ ಹಿರಿಮೆಯನ್ನು ಹೆಚ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿರುವ ಸರ್ಕಾರದ ನಡೆ ಅಭಿನಂದನಾರ್ಹ ಎಂದು ತಿಳಿಸಿದರು.
“ರೀಲ್ಸ್ ಮಾಡಿ-ರುಪೀಸ್ ಗೆಲ್ಲಿ” ಸ್ಪರ್ಧೆ ವಿಜೇತರಿಗೆ ಬಹುಮಾನ
ಈ ಸಂದರ್ಭದಲ್ಲಿ ಜಿಲ್ಲಾಡಳಿತ ವತಿಯಿಂದ ಮೊದಲ ಬಾರಿಗೆ ಅಚರಿಸಲಾದ ತುಮಕೂರು ದಸರಾ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ತುಮಕೂರು ದಸರಾ “ರೀಲ್ಸ್ ಮಾಡಿ-ರುಪೀಸ್ ಗೆಲ್ಲಿ” ಸ್ಪರ್ಧೆಯಲ್ಲಿ ಭಾಗವಹಿಸಿ ಸಾಮಾಜಿಕ ಜಾಲತಾಣಗಳಲ್ಲಿ 6.80ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಣೆ ಪಡೆದ ಮೇಘ ಮಂಜುನಾಥ್ ಅವರನ್ನು ಗೃಹ ಸಚಿವರು ಪಾರಿತೋಷಕ ಹಾಗೂ ನಗದು ಬಹುಮಾನ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ: ನಾಗಲಕ್ಷ್ಮೀ ಚೌಧರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು…